ಪದ್ಯ ೫೮: ಭೀಷ್ಮಾರ್ಜುನರ ಯುದ್ಧ ಹೇಗೆ ನಡೆಯಿತು?

ಒರೆತುದರ್ಜುನನೊಡಲಿನಲಿ ದುರು
ದುರಿಸಿ ಸುರಿದುದು ಅರುಣಮಯ ಜಲ
ನೆರವಣಿಗೆಯಲಿ ನಿಂದು ತೊಟ್ಟನು ನರ ಮಹಾಶರವ
ತರಿದನೆಡೆಯಲಿ ಭೀಷ್ಮನುರೆ ಬೊ
ಬ್ಬಿರಿದು ಬಳಿಕಾಗ್ನೇಯ ಬಾಣದ
ಗರಿಯ ಮಂತ್ರಿಸಿ ಹೂಡಿದನು ಕುರುಸೇನೆ ಕಳವಳಿಸೆ (ವಿರಾಟ ಪರ್ವ, ೯ ಸಂಧಿ, ೫೮ ಪದ್ಯ)

ತಾತ್ಪರ್ಯ:
ಅರ್ಜುನನ ದೇಹದಿಂದ ರಕ್ತವು ರಭಸದಿಂದ ಹರಿಯಿತು. ಅದನ್ನು ತಡೆದುಕೊಂಡು ಅರ್ಜುನನು ಮಹಾಬಾಣವೊಂದನ್ನು ಬಿಡಲು ಭೀಷ್ಮನು ಗರ್ಜಿಸಿ ಆ ಬಾಣವನ್ನು ಮಧ್ಯದಲ್ಲೇ ಕಡಿದು ಹಾಕಿದನು. ಅರ್ಜುನನು ಆಗ್ನೇಯಾಸ್ತ್ರವನ್ನು ಬಿಡಲು ಕೌರವ ಸೇನೆಯು ಗೊಂದಲಕ್ಕೀಡಾಯಿತು.

ಅರ್ಥ:
ಒರೆ: ಗುಣ, ದೋಷ ಪರೀಕ್ಷೆಮಾಡು, ಶೋಧಿಸಿ ನೋಡು; ಒಡಲು: ದೇಹ; ದುರುದುರಿಸಿ: ರಭಸ; ಸುರಿ: ಹರಿ; ಅರುಣ: ಕೆಂಪು; ಜಲ: ನೀರು; ನೆರವಣಿಗೆ: ಪರಿಪೂರ್ಣತೆ; ನಿಂದು: ನಿಲ್ಲು; ತೊಟ್ಟು: ತೊಡು; ನರ: ಅರ್ಜುನ; ಮಹಾಶರ: ಶ್ರೇಷ್ಠವಾದ ಬಾಣ; ತರಿ: ಕಡಿ, ಕತ್ತರಿಸು; ಉರೆ: ಹೆಚ್ಚು; ಬೊಬ್ಬಿರಿ: ಕೂಗು, ಗಟ್ಟಿಯಾಗಿ ಹೇಳು, ಉದ್ಘೋಷಿಸು; ಬಳಿಕ: ನಂತರ; ಆಗ್ನಿ: ಬೆಂಕಿ; ಬಾಣ: ಶರ; ಗರಿ: ಪುಕ್ಕ; ಮಂತ್ರ: ಛಂದೋ ಬದ್ಧವೂ ಪವಿತ್ರವೂ ಆದ ದೇವತಾಸ್ತುತಿ; ಹೂಡು: ತೊಡು; ಕಳವಳ: ಗೊಂದಲ;

ಪದವಿಂಗಡಣೆ:
ಒರೆತುದ್+ಅರ್ಜುನನ್+ಒಡಲಿನಲಿ+ ದುರು
ದುರಿಸಿ +ಸುರಿದುದು +ಅರುಣಮಯ +ಜಲ
ನೆರವಣಿಗೆಯಲಿ +ನಿಂದು+ ತೊಟ್ಟನು+ ನರ +ಮಹಾ+ಶರವ
ತರಿದನ್+ಎಡೆಯಲಿ +ಭೀಷ್ಮನ್+ಉರೆ +ಬೊ
ಬ್ಬಿರಿದು +ಬಳಿಕ್+ಆಗ್ನೇಯ +ಬಾಣದ
ಗರಿಯ +ಮಂತ್ರಿಸಿ +ಹೂಡಿದನು +ಕುರುಸೇನೆ +ಕಳವಳಿಸೆ

ಅಚ್ಚರಿ:
(೧) ರಕ್ತ ಹರಿಯಿತು ಎಂದು ಹೇಳುವ ಪರಿ – ಒರೆತುದರ್ಜುನನೊಡಲಿನಲಿ ದುರುದುರಿಸಿ ಸುರಿದುದು ಅರುಣಮಯ ಜಲ