ಪದ್ಯ ೩೦: ಭೀಮ ದುರ್ಯೋಧನರ ಯುದ್ಧ ಕೌಶಲ್ಯ ಹೇಗಿತ್ತು?

ಜಾಣು ಜಗುಳಿತು ಹೊಯ್ಲ ಮೊನೆ ಮುಂ
ಗಾಣಿಕೆಗೆ ಲಟಕಟಿಸಿದುದು ಬರಿ
ರೇಣುಜನನದ ಜಾಡ್ಯವೇ ಪಡಪಾಯ್ತು ಪಯಗತಿಗೆ
ತ್ರಾಣ ತಲವೆಳಗಾಯ್ತು ಶ್ರವ ಬಿ
ನ್ನಾಣ ಮೇಲಾಯಿತ್ತು ಕುಶಲದ
ಕೇಣದಲಿ ಕಾದಿದರು ಗದೆಗಳ ಕಿಡಿಯ ಕಿಡಿ ತಿವಿಯೆ (ಗದಾ ಪರ್ವ, ೬ ಸಂಧಿ, ೩೦ ಪದ್ಯ)

ತಾತ್ಪರ್ಯ:
ಅವರ ಜಾಣತನ ಕೆಲಸಕ್ಕೆ ಬಾರದೆ ಹೋಯಿತು. ಹೊಡೆತದ ತೀಕ್ಷ್ಣತೆಯು ನೋಡುತ್ತಿದ್ದಂತೆ ವ್ಯರ್ಥವಾಯಿತು. ಕಾಲಿನ ಗತಿಯ ವಿನ್ಯಾಸ ಕಣದಲ್ಲಿ ಧೂಳನ್ನೆಬ್ಬಿಸಿತೇ ಹೊರತು ವಿರೋಧಿಯನ್ನು ಬಾಗಿಸಲಿಲ್ಲ. ಶಕ್ತಿಯು ಕುಂದಿತು. ಆಯಾಸ ಹೆಚ್ಚಾಯಿತು. ಗದೆಗಳು ತಾಕಿ ಕಿಡಿಯೆದ್ದವು. ಅವರ ಕೌಶಲ್ಯ ಅತ್ಯುತ್ತತವಾಗಿತ್ತು.

ಅರ್ಥ:
ಜಾಣು: ಜಾಣತನ, ಬುದ್ಧಿವಂತ; ಜಗುಳು: ಜಾರು; ಹೊಯ್ಲು: ಹೊಡೆ; ಮೊನೆ: ಮುಖ; ಮುಂಗಾಣಿಕೆ: ಮುಂದಿನ ನೋಟ; ಲಟಕಟ: ಉದ್ರೇಕಗೊಳ್ಳು; ಬರಿ: ಕೇವಲ; ರೇಣು: ಧೂಳು, ಹುಡಿ; ಜಾಡ್ಯ: ಚಳಿ, ಸೋಮಾರಿತನ; ಪಡಪು: ಹೊಂದು, ಪಡೆ; ಪಯ: ಪಾದ; ಗತಿ: ಚಲನೆ, ವೇಗ; ತ್ರಾಣ: ಕಾಪು, ರಕ್ಷಣೆ, ಶಕ್ತಿ, ಬಲ; ತಳವೆಳ: ಬೆರಗು, ಆಶ್ಚರ್ಯ; ಶ್ರವ: ಧ್ವನಿ; ಬಿನ್ನಾಣ: ಕೌಶಲ್ಯ; ಮೇಲೆ: ಹೆಚ್ಚು; ಕುಶಲ: ಚಾತುರ್ಯ; ಕೇಣ: ಹೊಟ್ಟೆಕಿಚ್ಚು, ಮತ್ಸರ; ಕಾದು: ಹೋರಾದು; ಗದೆ: ಮುದ್ಗರ; ಕಿಡಿ: ಬೆಂಕಿ; ತಿವಿ: ಚುಚ್ಚು;

ಪದವಿಂಗಡಣೆ:
ಜಾಣು +ಜಗುಳಿತು +ಹೊಯ್ಲ +ಮೊನೆ +ಮುಂ
ಗಾಣಿಕೆಗೆ+ ಲಟಕಟಿಸಿದುದು +ಬರಿ
ರೇಣುಜನನದ +ಜಾಡ್ಯವೇ+ ಪಡಪಾಯ್ತು+ ಪಯಗತಿಗೆ
ತ್ರಾಣ+ ತಲವೆಳಗಾಯ್ತು+ ಶ್ರವ+ ಬಿ
ನ್ನಾಣ +ಮೇಲಾಯಿತ್ತು+ ಕುಶಲದ
ಕೇಣದಲಿ +ಕಾದಿದರು +ಗದೆಗಳ +ಕಿಡಿಯ +ಕಿಡಿ +ತಿವಿಯೆ

ಅಚ್ಚರಿ:
(೧) ಧೂಳೇ ಹೆಚ್ಚಿತ್ತು ಎಂದು ಹೇಳಲು – ಬರಿ ರೇಣುಜನನದ ಜಾಡ್ಯವೇ ಪಡಪಾಯ್ತು ಪಯಗತಿಗೆ
(೨) ಕ ವರ್ಗದ ಪದಗಳ ಸಾಲು – ಕುಶಲದ ಕೇಣದಲಿ ಕಾದಿದರು ಗದೆಗಳ ಕಿಡಿಯ ಕಿಡಿ ತಿವಿಯೆ