ಪದ್ಯ ೨೨: ಊರ್ವಶಿಯು ಏಕೆ ಕರಗಿದಳು?

ವಿಕಳಮತಿಯೋ ಮೇಣಿವ ನಪುಂ
ಸಕನೊ ಜಡನೋ ಶ್ರೋತ್ರಿಯನೊ ಬಾ
ಧಕನೊ ಖಳನೋ ಖೂಳನೋ ಮಾನವ ವಿಕಾರವಿದೊ
ವಿಕಟ ತಪಸಿನ ದೇವ ದೈತ್ಯರ
ಮಕುಟವಾಂತದು ವಾಮಪಾದವ
ನಕಟ ಕೆಟ್ಟೆನಲಾಯೆನುತ ಕರಗಿದಳು ನಳಿನಾಕ್ಷಿ (ಅರಣ್ಯ ಪರ್ವ, ೯ ಸಂಧಿ, ೨೨ ಪದ್ಯ)

ತಾತ್ಪರ್ಯ:
ಅರ್ಜುನನ ಭಾವನೆಯನ್ನು ಕಂಡು, ಊರ್ವಶಿಯು ಅರ್ಜುನನನ್ನು ನೋಡಿ, ಇವನೇನು ಮತಿಹೀನನೋ, ಅಥವ ನಪುಂಸಕನೋ, ತಿಳುವಳಿಕೆಯಿಲ್ಲದವನೋ, ಬ್ರಾಹ್ಮಣನೋ, ಪರರಿಗೆ ಬಾಧೆಕೊಡುವ ಸ್ವಭಾವದವನೋ, ನೀಚನೋ, ದುಷ್ಟನೋ, ಮಾನವಾಕಾರವಿರುವ ಇನ್ನೇನೋ? ಮಹಾ ತಪಸ್ಸನ್ನು ಮಾಡಿದ ದೇವ ದಾನವರು ಬಂದು ತಮ್ಮ ಕಿರೀಟವನ್ನು ಎಡಪಾದಕ್ಕೆ ಇಟ್ಟು ನನ್ನನ್ನು ಬೇಡಿಕೊಳ್ಳುತ್ತಿದ್ದರು, ಅಂತಹ ನಾನು ಈಗ ಕೆಟ್ಟೆನಲ್ಲಾ ಎಂದು ಚಿಂತಿಸುತ್ತಾ ಊರ್ವಶಿಯು ಕರಗಿಹೋದಳು.

ಅರ್ಥ:
ವಿಕಳ:ಭ್ರಮೆ, ಭ್ರಾಂತಿ; ಮತಿ: ಬುದ್ಧಿ; ಮೇಣ್: ಅಥವ; ನಪುಂಸಕ: ಕೊಜ್ಜೆ, ಷಂಡ, ಖೋಜಾ, ನಿರ್ವೀರ್ಯ; ಜಡ: ಆಲಸ್ಯ, ಅಚೇತನ; ಶ್ರೋತ್ರಿ: ಬ್ರಾಹ್ಮಣ; ಬಾಧಕ: ತೊಂದರೆ ಕೊಡುವವ; ಖಳ: ಕ್ರೂರ; ಖೂಳ: ದುಷ್ಟ; ಮಾನವ: ನರ; ವಿಕಾರ: ಕುರೂಪ; ವಿಕಟ: ವಿಕಾರ, ಸೊಕ್ಕಿದ; ತಪಸ್ಸು: ಧ್ಯಾನ; ದೇವ: ಸುರರು; ದೈತ್ಯ: ರಾಕ್ಷಸ; ಮಕುಟ: ಕಿರೀಟ; ವಾಮಪಾದ: ಎಡ ಕಾಲು; ಅಕಟ: ಅಯ್ಯೋ; ಕೆಟ್ಟೆ: ಹಾಳಾಗು; ಕರಗು: ನೀರಾಗಿಸು, ಕನಿಕರ; ನಳಿನಾಕ್ಷಿ: ಕಮಲದಂತ ಕಣ್ಣುಳ್ಳವಳು;

ಪದವಿಂಗಡಣೆ:
ವಿಕಳಮತಿಯೋ +ಮೇಣ್+ಇವ +ನಪುಂ
ಸಕನೊ+ ಜಡನೋ +ಶ್ರೋತ್ರಿಯನೊ +ಬಾ
ಧಕನೊ+ ಖಳನೋ +ಖೂಳನೋ+ ಮಾನವ+ ವಿಕಾರವಿದೊ
ವಿಕಟ +ತಪಸಿನ +ದೇವ +ದೈತ್ಯರ
ಮಕುಟವಾಂತದು +ವಾಮಪಾದವನ್
ಅಕಟ+ ಕೆಟ್ಟೆನಲಾ+ಎನುತ +ಕರಗಿದಳು +ನಳಿನಾಕ್ಷಿ

ಅಚ್ಚರಿ:
(೧) ಅರ್ಜುನನನ್ನು ನೋಡಿದ ಬಗೆ – ವಿಕಳಮತಿ, ನಪುಂಸಕ, ಜಡ, ಶ್ರೋತ್ರಿ, ಬಾಧಕ, ಖಳ, ಖೂಳ, ವಿಕಾರ
(೨) ಊರ್ವಶಿಯ ಹಿರಿಮೆ – ವಿಕಟ ತಪಸಿನ ದೇವ ದೈತ್ಯರ ಮಕುಟವಾಂತದು ವಾಮಪಾದವ